ಮಂಗಳೂರು: ದೆಹಲಿಯಲ್ಲಿ ಶನಿವಾರ ಮತ್ತು ಭಾನುವಾರ ಲೋಕಸಭೆ ಚುನಾವಣೆಗೆ ತಂತ್ರಗಾರಿಕೆ ಹೆಣೆಯಲು ಬಿಜೆಪಿ ರಾಷ್ಟ್ರೀಯ ಸಮಾವೇಶ ನಡೆಸುತ್ತಿದ್ದರೆ ಕರ್ನಾಟಕದಲ್ಲಿ ಕಾಂಗ್ರೆಸ್ ಸಮಾವೇಶ ಹಮ್ಮಿಕೊಂಡಿದ್ದು, ಅದು ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಆಗಿದೆ.
ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಶನಿವಾರ ಮಧ್ಯಾಹ್ನ ಕಾಂಗ್ರೆಸ್ ರಾಜ್ಯ ಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದ್ದು, ಲೋಕಸಭೆ ಚುನಾವಣೆಗೆ ಕಾರ್ಯಕರ್ತರ ಸಜ್ಜುಗೊಳಿಸುವ ಸಲುವಾಗಿ ಈ ಸಮಾವೇಶ ಆಯೋಜಿಸಲಾಗಿದೆ.
ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತು ವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಎಲ್ಲಾ ಸಚಿವರು, ಸಂಸದರರು, ಶಾಸಕರು, ಪದಾಧಿಕಾರಿಗಳು, ವಿಧಾನಸಭೆ ಅಭ್ಯರ್ಥಿಗಳು, ಆಕಾಂಕ್ಷಿಗಳು, ಎಐಸಿಸಿ, ಕೆಪಿಸಿಸಿ ಸದಸ್ಯರು, ಡಿಸಿಸಿ ಅಧ್ಯಕ್ಷರು ಸೇರಿದಂತೆ ಮುಂಚೂಣಿ ಘಟಕದ ಎಲ್ಲಾ ಹಂತದ ಅಧ್ಯಕ್ಷರು ಕಡ್ಡಾಯ ಭಾಗಿಗೆ ಸೂಚನೆ ನೀಡಲಾಗಿದೆ.
ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಆವರಣದ ಸುತ್ತಮುತ್ತ ಐದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಡ್ರೋನ್ ಹಾರಾಟಕ್ಕೆ ನಿಷೇಧಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶಿಸಿದ್ದಾರೆ. ಮುಖ್ಯಮಂತ್ರಿಗಳ ಸುರಕ್ಷತೆ ಮತ್ತು ಭದ್ರತೆಯ ಹಿತದೃಷ್ಟಿಯಿಂದ ನಿಷೇಧಿಸಲಾಗಿದೆ. ಕಾರ್ಯಕ್ರಮದ ಬಳಿಕ ವಾಮಂಜೂರಿನ ತಿರುವೈಲ್‍ನಲ್ಲಿ ಕಂಬಳದಲ್ಲಿ ಸಿದ್ದರಾಮಯ್ಯ ಭಾಗವಹಿಸಲಿರುವ ಹಿನ್ನಲೆ ವಾಮಂಜೂರಿನ ತಿರುವೈಲಿನಲ್ಲಿ ಕಂಬಳ ಕಾರ್ಯಕ್ರಮದ ಸುತ್ತಮುತ್ತಲೂ 5 ಕಿ.ಮೀ ವ್ಯಾಪ್ತಿಯಲ್ಲಿ ತಾತ್ಕಾಲಿಕವಾಗಿ ರೆಡ್‍ಜೋನ್ ಎಂದು ಪರಿಗಣಿಸಿ ಡ್ರೋನ್ ಹಾರಾಟ ನಿರ್ಬಂಧಿಸಲಾಗಿದೆ.