ತುಮಕೂರು: ತುಮಕೂರು ತಾಲೂಕಿನ ಕ್ಯಾತಸಂದ್ರ ಪ್ರದೇಶದಲ್ಲಿರುವ ಕ್ವಾರಿ ಕಮ್ ಸ್ಟೋನ್ ಕ್ರಷರ್ ಘಟಕದಲ್ಲಿ ಮಂಗಳವಾರ ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಬೃಹತ್ ಬಂಡೆಯೊಂದು ಬಿದ್ದು ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಛತ್ತೀಸ್‌ಗಢದ ಅಬ್ಬು ಮತ್ತು ಬಿಹಾರದ ಮನು ಎಂದು ಗುರುತಿಸಲಾಗಿದ್ದು, ಇಬ್ಬರೂ 20ರ ಹರೆಯದವರು ಎಂದು ಪೊಲೀಸರು ಹೇಳಿದ್ದಾರೆ.
ಇದನ್ನು ಓದಿ: ತುಮಕೂರು: ಪಂಚರ್ ಹಾಕುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರ ದುರ್ಮರಣ
ಬಂಡೆ ಸ್ಫೋಟಿಸುವ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದ್ದು, ಬಂಡೆ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡ ವ್ಯಕ್ತಿ ಪ್ರಸ್ತುತ ಇಲ್ಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮೃತ ಕಾರ್ಮಿಕರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.
“ಈ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ತನಿಖೆ ನಡೆಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ” ಎಂದು ಅವರು ತಿಳಿಸಿದ್ದಾರೆ.